ಬೆಂಗಳೂರು;- ಯುವಕನೊಬ್ಬನ ಮರ್ಮಾಂಗ ಜಜ್ಜಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆ ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಯುವಕ ಯಾರು ಎಂಬುದು ತಿಳಿದು ಬಂದಿಲ್ಲ. 23 ರಿಂದ 25 ವರ್ಷದೊಳಗಿನ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೇಷಾದ್ರಿಪುರಂ ರೈಲ್ವೆ ಪ್ಲಾಟ್‌ಫಾರಂ ರಸ್ತೆಯಲ್ಲಿರುವ ರೈಲ್ವೆ ಇಲಾಖೆಗೆ ಸೇರಿದ ಖಾಲಿ ಜಾಗದಲ್ಲಿ ಯುವಕನ ಶವ ಪತ್ತೆಯಾಗಿದೆ.ನಿನ್ನೆ ರಾತ್ರಿ ಸ್ಥಳೀಯರು ಶವ ಕಂಡು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಶೇಷಾದ್ರಿಪುರಂ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ದುಷ್ಕರ್ಮಿಗಳು ಯುವಕನ ತಲೆಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ, ಮರ್ಮಾಂಗ ಜಜ್ಜಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ.

ಪ್ರಕರಣ ದಾಖಲಿಸಿಕೊಂಡಿರುವ ಶೇಷಾದ್ರಿಪುರಂ ಠಾಣೆ ಪೊಲೀಸರು ಕೊಲೆಯಾಗಿರುವ ಯುವಕ ಯಾರು, ಯಾವ ಕಾರಣಕ್ಕಾಗಿ ಈ ರೀತಿ ಭೀಕರವಾಗಿ ಕೊಲೆ ಮಾಡಿದ್ದಾರೆ, ಆರೋಪಿಗಳು ಯಾರು ಎಂಬುದರ ಬಗ್ಗೆ ತನಿಖೆ ಕೈಗೊಂಡಿದ್ದಾರೆ.