ಚಿತ್ರದುರ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದಲ್ಲಿ ಜಾರಿಗೊಳಿಸಿರುವ ’ಅಂತರ್ಜಲ ಚೇತನ’ ಯೋಜನೆಯಡಿ ಜಿಲ್ಲೆಯ ಜಲಮೂಲಗಳ ಸಂರಕ್ಷಣೆ ಹಾಗೂ ಜಲಚಕ್ರ ವ್ಯವಸ್ಥೆ ಸುಧಾರಣೆಗಾಗಿ ೨೭೦ ಕೋಟಿ ರೂ. ಗಳ ವೆಚ್ಚದಲ್ಲಿ ಸುಮಾರು ೪೬ ಸಾವಿರ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಿದೆ ಎಂದು ಚಿತ್ರದುರ್ಗ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ’ಅಂತರ್ಜಲ ಚೇತನ’ ಯೋಜನೆಯ ಕುರಿತು ಪಿಡಿಒ ಹಾಗೂ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಮಾಹಿತಿ ಕಾರ್ಯಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬರಪೀಡಿತ ಚಿತ್ರದುರ್ಗ ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನೆರವಿನೊಂದಿಗೆ ಜಲಮೂಲಗಳ ಸಂರಕ್ಷಣೆ ಹಾಗೂ ಅಂತರ್ಜಲ ವೃದ್ಧಿಗಾಗಿ ’ಅಂತರ್ಜಲ ಚೇತನ’ ಯೋಜನೆಯನ್ನು ಚಿತ್ರದುರ್ಗ ಜಿಲ್ಲೆಯೂ ಸೇರಿದಂತೆ ರಾಜ್ಯದ ೯ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಂಡಿದ್ದು, ಅಂತರ್ಜಲ ಮಟ್ಟ ಸುಧಾರಣೆಗಾಗಿ ಸಾಕಷ್ಟು ತಜ್ಞರು ಅಧ್ಯಯನ ನಡೆಸಿ, ವರದಿ ನೀಡಿದ್ದಾರೆ. ಹೀಗಾಗಿ ಜಿಲ್ಲೆಯ ಪಾಲಿಗೆ ಈ ಯೋಜನೆ ವರದಾನವಾಗಲಿದೆ. ಈ ವರ್ಷ ಜಿಲ್ಲೆಯಲ್ಲಿ ೨೭೦ ಕೋಟಿ ರೂ. ವೆಚ್ಚದಲ್ಲಿ ಜಲಸಂರಕ್ಷಣೆಗೆ ಸಂಬಂಧಿಸಿದ ಸುಮಾರು ೪೬ ಸಾವಿರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಅವರು ಹೇಳಿದರು.

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಕಾರ್ಯಗಾರದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೊನ್ನಾಂಬ, ಉಪಕಾರ್ಯದರ್ಶಿ ಡಾ. ರಂಗಸ್ವಾಮಿ ಉಪಸ್ಥಿತರಿದ್ದರು. ಕಾರ್ಯಗಾರದಲ್ಲಿ ವಿವಿಧ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಪಿಡಿಒ ಗಳು ಭಾಗವಹಿಸಿದ್ದರು.