ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಹಾಗೂ ಕೋವಿಡ್-19 ಆಸ್ಪತ್ರೆಗಾಗಿ ಡಿಎಂಎಫ್ ನಿಧಿಯಿಂದ 23.55  ಕೋಟಿ ಅನುದಾನವನ್ನು ಖರ್ಚು ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಜಿಲ್ಲಾ ಖನಿಜ ಪ್ರತಿಷ್ಟಾನ ಸಮಿತಿ ಸಭೆಯ ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿರು.

ಜಿಲ್ಲೆಯ ಶಾಸಕರು ನೀಡಿದ ಕ್ರಿಯಾ ಯೋಜನೆಯ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿದ್ದು, ಡಿಎಂಎಫ್‍ನಿಧಿಯಿಂದ ಹಂತ ಹಂತವಾಗಿ 141 ಕೋಟಿ ರೂಪಾಯಿಯನ್ನು ಖರ್ಚು ಮಾಡುವ ಉದ್ದೇಶ ಹೊಂದಲಾಗಿದೆ. ಇದರ ಜೊತೆಗೆ ಪ್ರತ್ಯಕ್ಷ ಹಾಗೂ ಪರೋಕ್ಷ ಗಣಿಭಾದಿತ ಪ್ರದೇಶಗಳಿಗೆ ತಲಾ ಶೇ 50 ರಷ್ಟು ಹಣ ಖರ್ಚು ಮಾಡಲು ಅವಕಾಶವಿದೆ. ಇದಕ್ಕೆ ಸಮಿತಿಯ ಶಾಸಕರು ಕೂಡ ಒಪ್ಪಿಗೆ ನೀಡಿದ್ದಾರೆ. ಶಿಕ್ಷಣ ಮತ್ತು ಆರೋಗ್ಯ, ಪರಿಸರ ಸಂರಕ್ಷಣೆ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಲಾಗುವುದು. ಕೋವಿಡ್-19 ನಿಯಂತ್ರಣಕ್ಕಾಗಿ ಮೀಸಲಿಟ್ಟಿರುವ ಹಣವನ್ನು ಹಂತಹಂತವಾಗಿ ಮುಂದಿನ ದಿನಗಳಲ್ಲಿ ಬಳಕೆ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಕೋವಿಡ್-19 ಗೆ ಸಂಬಂಧಪಟ್ಟಂತೆ ಜಿಲ್ಲೆಗೆ ಒಂದು ಪ್ರಯೋಗಾಲಯದ ಅವಶ್ಯಕತೆ ಇದ್ದು, ರಾಜ್ಯದಲ್ಲಿ 32 ಪ್ರಯೋಗಾಲಯಗಳನ್ನು ಪ್ರಾರಂಭ ಮಾಡಲಾಗಿದೆ. ಇದರಿಂದ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದ ವ್ಯಕ್ತಿಗಳನ್ನು ಪರೀಕ್ಷೆ ಮಾಡುವ ಕೆಲಸ ಮಾಡಲಾಗುತ್ತಿದೆ. ಪ್ರತಿದಿನ ಕೋವಿಡ್-19 ಪರೀಕ್ಷೆಗೆ ಸಂಬಂಧಪಟ್ಟಂತೆ 6 ರಿಂದ 7 ಸಾವಿರ ಪರೀಕ್ಷೆ ಮಾಡಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಾಕಾರ ಇನ್ನೂ ಹೆಚ್ಚಿನ ಪರೀಕ್ಷೆಗಳು ನಡೆಯಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿವೆ. ಇನ್ನೂ ಮುಂದೆ ಎಲ್ಲ ಜಿಲ್ಲೆಗಳಲ್ಲಿ ಪ್ರಯೋಗಾಲಯಗಳ ಆರಂಭಕ್ಕೆ ಒತ್ತು ನೀಡಲಾಗುವುದು ಎಂದು ಸಚಿವರು ಹೇಳಿದರು.

ನಿನ್ನೆ ನಡೆದ ಟಾಸ್ಕ್‍ಫೋರ್ಸ್ ಸಭೆಯ ನಿರ್ಧಾರದಂತೆ ಮುಂದಿನ ದಿನಗಳಲ್ಲಿ ವಿದೇಶದಿಂದ ರಾಜ್ಯಕ್ಕೆ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್ ಮಾಡಲಾಗುವುದು. 14 ದಿನಗಳ ನಂತರ ಪರೀಕ್ಷೆಯ ವರದಿ ನೆಗಟಿವ್ ಬಂದ ನಂತರ ಅವರನ್ನು ಮನೆಗೆ ಕಳುಹಿಸಲಾಗುವುದು ಎಂದರು.

ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್‍ಗಳು ಕಡಿಮೆ ಇವೆ. ಹಾಗಾಗಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಿಗೆ ಆಕ್ಸಿಜನ್ ಬೆಡ್‍ಗಳನ್ನಾಗಿ ಪರಿವರ್ತನೆ ಮಾಡಲು ಕ್ರಮಕೈಗೊಳ್ಳಲಾಗುವುದು. ಹಾಟ್‍ಸ್ಪಾಟ್‍ಗಳಲ್ಲಿನ ಸ್ಯಾಂಪಲ್ಸ್ ಸಂಗ್ರಹ ಮಾಡುವುದು ತುಂಬಾ ಕಷ್ಟವಾಗುತ್ತಿತ್ತು. ಹಾಗಾಗಿ ಕಿಯೋಕ್ಸ್ ಮೂಲಕ ಮಾದರಿ ಸಂಗ್ರಹಿಸಲಾಗುವುದು, ಜೊತೆಗೆ ಹಾಟ್‍ಸ್ಪಾಟ್‍ಗಳಲ್ಲಿ ಹೆಚ್ಚಿನ ಫೀವರ್‍ಕ್ಲಿನಿಕ್ ಪ್ರಾರಂಭ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ದೇಶದಲ್ಲಿನ ಕೊರೊನಾ ಸೋಂಕಿನ ಬಗ್ಗೆ ಐಸಿಎಂಆರ್ 75 ಜಿಲ್ಲೆಗಳಲ್ಲಿ ಅಧ್ಯಯನ ಮಾಡುತ್ತಿದೆ. ಐಸಿಎಂಆರ್ ತಂಡದ ಮೂಲಕ ಅಧ್ಯಯನ ಮಾಡುತ್ತಿದೆ. ತಂಡದ ನೇತೃತ್ವವನ್ನು ಡಾ.ರಣದೀಪ್  ವಹಿಸಿಕೊಂಡಿದ್ದು ಇವರು ಕೊರೊನಾ ಕುರಿತು ನೀಡುವ ವರದಿಯನ್ನಾಧರಿಸಿ ಮುಂದಿನ ದಿನಗಳಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಕುರಿತು ಚರ್ಚಿಸಲಾಗುವುದು ಎಂದರು.

ಗ್ರೀನ್ ಝೋನ್‍ನಲ್ಲಿರುವವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೋವಿಡ್-19 ಸೋಂಕಿಗೆ ಯಾವುದೇ ಲಸಿಕೆ ಇಲ್ಲ. ಹಾಗಾಗಿ ಎಲ್ಲರೂ ಸಾಮಾಹಿಕ ಅಂತರ ಕಾಪಾಡಬೇಕು ಎಂದು ಸಚಿವರು ಮನವಿ ಮಾಡಿದರು.

ಸಂಸದ ಎ.ನಾರಾಯಣಸ್ವಾಮಿ, ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಗೂಳಿಹಟ್ಟಿ ಡಿ.ಶೇಖರ್, ಟಿ.ರಘುಮೂರ್ತಿ, ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಹೊನ್ನಂಬ ಹಾಗೂ ಗಣಿ ಮತ್ತು ಭೂ ವಿಜ್ಞಾನಿ ಇಲಾಖೆಯ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.