ಚಿತ್ರದುರ್ಗ: ಜಲಮೂಲಗಳನ್ನು ಪುನಶ್ಚೇತನಗೊಳಿಸಿ, ಮಳೆಯ ನೀರು ಇಂಗುವಂತೆ ಮಾಡಿದರೆ ಅಂತರ್ಜಲ ಮಟ್ಟ ವೃದ್ಧಿಸುತ್ತದೆ ಎಂದು ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ಹೇಳಿದರು.

ನಗರದ ಒನಕೆ ಓಬವ್ವ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಜಲಶಕ್ತಿ ಅಭಿಯಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದ ಮಳೆ ಬೀಳುವುದರಿಂದ, ಅಂತರ್ಜಲ ಮಟ್ಟ ಕುಸಿದಿರುವುದನ್ನು ಮನಗಂಡ ಸರ್ಕಾರ ಜಲಶಕ್ತಿ ಅಭಿಯಾನದಡಿ ಜಿಲ್ಲೆಯನ್ನು ಆಯ್ಕೆ ಮಾಡಿದೆ. ಸಾರ್ವಜನಿಕರಲ್ಲಿ ಜಲಮೂಲಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿದರೆ, ಮುಂದಿನ ಪೀಳಿಗೆಗೆ ನೀರಿನ ಅಭಾವ ಉಂಟಾಗುವುದನ್ನು ತಡೆಯಬಹುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಜಾಥಾದಲ್ಲಿ ಉಪವಿಭಾಗಾಧಿಕಾರಿ ವಿಜಯ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಾನಾಯಕ್, ಹಿರಿಯ ನಾಗರೀಕರು ಮತ್ತು ವಿಕಲಚೇತನರ ಕಲ್ಯಾಣಾಧಿಕಾರಿ ವೈಶಾಲಿ ಹಾಗೂ ಸ್ವಸಹಾಯ ಸಂಘದ ಮಹಿಳೆಯರು ಭಾಗವಹಿಸಿದ್ದರು. ಜಾಥಾ ಒನಕೆ ಓಬ್ಬವ್ವ ವೃತ್ತದಿಂದ ಗಾಂಧಿ ವೃತ್ತದವರೆಗೆ ಸಾಗಿ ಬಂದಿತು. ಈ ಸಂದರ್ಭದಲ್ಲಿ ಘೋಷಣೆಗಳೊಂದಿಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.