ಚಿತ್ರದುರ್ಗ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಆಗಸ್ಟ್ 15 ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸರಳವಾಗಿ ಆಚರಿಸಲಾಗುತ್ತಿದ್ದು, ಭಾರತದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಈ ಬಾರಿ ಸ್ವಾತಂತ್ರ್ಯ ಹೋರಾಟಗಾರರ ಮನೆ ಬಾಗಿಲಿಗೆ ಹೋಗಿ ಸ್ವಾತಂತ್ರ್ಯ ಹೋರಾಟಗಾರರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವ ಸಮರ್ಪಿಸಲಾಯಿತು.

   ಹಿರಿಯೂರು ತಾಲ್ಲೂಕಿನ ಕೋವೇರಹಟ್ಟಿ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರಾದ ಎ.ಗೋವಿಂದಪ್ಪ ಹಾಗೂ ಮರಡಿಹಳ್ಳಿ ಗ್ರಾಮ ಸ್ವಾತಂತ್ರ್ಯ ಹೋರಾಟಗಾರರಾದ ಭೀಮಪ್ಪ ಮತ್ತು ಹನುಮಂತಪ್ಪ ಹಾಗೂ ಚಿತ್ರದುರ್ಗ ತಾಲ್ಲೂಕಿನ ನರೇನಾಳ್ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರಾದ ತಿಮ್ಮಾರೆಡ್ಡಿ ಸೇರಿದಂತೆ ನಾಲ್ಕು ಜನ ಸ್ವಾತಂತ್ರ್ಯ ಹೋರಾಟಗಾರರಿಗೆ ಜಿಲ್ಲಾಡಳಿತದಿಂದ ಸನ್ಮಾನ ಮಾಡಲಾಯಿತು.

  ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಉಪವಿಭಾಗಾಧಿಕಾರಿ ಪ್ರಸನ್ನ ಸೇರಿದಂತೆ ತಾಲ್ಲೂಕು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.