ಚಿತ್ರದುರ್ಗ: ಚಿತ್ರದುರ್ಗ ನಗರದ ವಿವಿಧೆಡೆ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯನ್ನು ಶುಕ್ರವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ವೀಕ್ಷಣೆ ಮಾಡಿದರು.

 ನಗರದ ದಳಗಿರಿ ಬಡಾವಣೆ ರಸ್ತೆ ಅಗಲೀಕರಣ ಕಾಮಗಾರಿ, ಗಾಂಧಿ ವೃತ್ತದಿಂದ ಕನಕ ವೃತ್ತದವರೆಗೆ ರಸ್ತೆ ಅಗಲೀಕರಣ, ಗಾಂಧಿ ವೃತ್ತದಿಂದ ಜೆಎಂಐಟಿ ವೃತ್ತ, ಪ್ರವಾಸಿ ಮಂದಿರದಿಂದ ಗಾಂಧಿವೃತ್ತದವರೆಗೆ ರಸ್ತೆ ಅಗಲೀಕರಣಕ್ಕೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಕಾಮಗಾರಿ ಕೆಲಸ ಆರಂಭವಾಗಿದೆ. ಈ ಹಿನ್ನಲೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯನ್ನು ಜಿಲ್ಲಾಧಿಕಾರಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.

  ರಸ್ತೆ ಅಗಲೀಕರಣ ಕಾಮಗಾರಿಯನ್ನು ವ್ಯವಸ್ಥಿತವಾಗಿ ಮಾಡಬೇಕು. ಗುಣಮಟ್ಟದ ಹಾಗೂ ಶಾಶ್ವತವಾಗಿ ಉಳಿಯುವಂತಹ ಕಾಮಗಾರಿಗೆ ಒತ್ತು ನೀಡಬೇಕು ಎಂದು ಗುತ್ತಿಗೆದಾರರಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದರು.

  ನಗರದ ಪ್ರವಾಸಿ ಮಂದಿರದ ಬಳಿ ಇರುವ ಇಂದಿರಾ ಕ್ಯಾಂಟೀನ್‍ಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು. ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಇಂದಿರಾ ಕ್ಯಾಂಟೀನ್ ಆಗಮಿಸುವ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಜಿಲ್ಲಾಧಿಕಾರಿ ಸಾರ್ವಜನಿಕರಿಗೆ ಮನವಿ ಮಾಡಿದರು.

  ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸತೀಶರೆಡ್ಡಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಸತೀಶ್‍ಬಾಬು, ನಗರಾಭಿವೃದ್ಧಿ ಪ್ರಾಧಿಕಾರದ ಇಂಜಿನಿಯರ್ ಅಲ್ಲಾಭಕ್ಷಿ, ನಗರಸಭೆ ಪೌರಾಯುಕ್ತ ಹನುಮಂತರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.