ಚಿತ್ರದುರ್ಗ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ, ರೈತ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ಕೋಮುವಾದಿ ಬಿಜೆಪಿ.ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ ಪಕ್ಷದ ಹೈಕಮಾಂಡ್ ಆದೇಶದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಚುನಾವಣಾ ಪೂರ್ವದಲ್ಲಿ ಅಗತ್ಯ ವಸ್ತುಗಳ ಬೆಲೆ ಇಳಿಸುವುದಾಗಿ ಜನತೆಗೆ ಭರವಸೆ ನೀಡಿದ ನರೇಂದ್ರಮೋದಿ ಗೆದ್ದು ಪ್ರಧಾನಿಯಾದ ಮೇಲೆ ಭರವಸೆ ಈಡೇರಿಸದೆ ವಂಚನೆ ಮಾಡಿದ್ದಾರೆ. ಅಡಿಗೆ ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನವಿರೋಧಿ ನೀತಿಯಿಂದಾಗಿ ಎಲ್ಲದರ ಮೇಲೆ ಪರಿಣಾಮ ಬೀರಿದೆ. ದೇಶದ ಬಡವರು, ದಲಿತರು, ರೈತರು, ಕೂಲಿ ಕಾರ್ಮಿಕರ ಬಗ್ಗೆ ಬಿಜೆಪಿ.ಗೇನಾದರೂ ಗೌರವವಿದ್ದರೆ ಕೂಡಲೆ ದಿನಬಳಕೆ ವಸ್ತುಗಳ ಬೆಲೆ ಇಳಿಸಿ ಶ್ರೀಸಾಮಾನ್ಯರ ನೆರವಿಗೆ ಮುಂದಾಗಬೇಕೆಂದು ಒತ್ತಾಯಿಸಿದರು.

ಸಿಮೆಂಟ್, ಸ್ಟೀಲ್ ಬೆಲೆ ಏರಿಕೆಯಾಗಿರುವುದರಿಂದ ಬಡವರು ಮನೆಗಳನ್ನು ಕಟ್ಟಿಕೊಳ್ಳಲು ಆಗುತ್ತಿಲ್ಲ. ಮನಮೋಹನ್‌ಸಿಂಗ್ ದೇಶದ ಪ್ರಧಾನಿಯಾಗಿದ್ದಾಗ ಅಂತರರಾಷ್ಟೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಜಾಸ್ತಿಯಿದ್ದರೂ ಪೆಟ್ರೋಲ್-ಡೀಸೆಲ್, ಅಡುಗೆ ಅನಿಲವನ್ನು ಏರಿಕೆ ಮಾಡಿರಲಿಲ್ಲ. ದೇಶಭಕ್ತಿ ಹೆಸರಿನಲ್ಲಿ ಯುವಕರನ್ನು ಸೆಳೆದುಕೊಳ್ಳುತ್ತಿರುವ ಬಿಜೆಪಿ.ಯನ್ನು ಕಿತ್ತೆಸೆದು ಮತ್ತೆ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಾಗ ಮಾತ್ರ ದೇಶದ ಜನ ನೆಮ್ಮದಿಯಿಂದಿರಲು ಸಾಧ್ಯ ಎಂದು ಹೇಳಿದರು.

ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಜಿ.ಪಂ.ಅಧ್ಯಕ್ಷೆ ಶಶಿಕಲ ಸುರೇಶ್‌ಬಾಬು, ಮಾಜಿ ಶಾಸಕರುಗಳಾದ ಬಿ.ಜಿ.ಗೋವಿಂದಪ್ಪ, ಎ.ವಿ.ಉಮಾಪತಿ, ತಿಪ್ಪೇಸ್ವಾಮಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಜಿ.ಪಂ.ಸದಸ್ಯರುಗಳಾದ ಬಿ.ಪಿ.ಪ್ರಕಾಶ್‌ಮೂರ್ತಿ, ನರಸಿಂಹರಾಜು, ಯೋಗೇಶ್‌ಬಾಬು, ಭೀಮಸಮುದ್ರದ ಜಿ.ಎಸ್.ಮಂಜುನಾಥ್, ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಕರಿಯಪ್ಪ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಫಾತ್ಯರಾಜನ್, ಹಿರಿಯ ಉಪಾಧ್ಯಕ್ಷರುಗಳಾದ ಅಜ್ಜಪ್ಪ, ಆರ್.ಕೆ.ನಾಯ್ಡು, ನಜ್ಮತಾಜ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ಕೆ.ಪಿ.ಸಿ.ಸಿ. ಪರಿಶಿಷ್ಟ ಜಾತಿ ವಿಭಾಗದ ಸದಸ್ಯ ಟಿ.ಮಲ್ಲೇಶ್. ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಿ.ಕೆ.ಮೀನಾಕ್ಷಿ, ಮೋಕ್ಷರುದ್ರಸ್ವಾಮಿ, ಅಲ್ಪಸಂಖ್ಯಾತರ ವಿಭಾಗ, ಇಂಟೆಕ್, ಕಾರ್ಮಿಕ ವಿಭಾಗ, ಎನ್.ಎಸ್.ಯು.ಐ.ಹಾಗೂ ವಿವಿಧ ಬ್ಲಾಕ್‌ಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.