ಚಿತ್ರದುರ್ಗ: ಕಿರಿಯ ಆರೋಗ್ಯ ಸಹಾಯಕಿಯರ ತರಬೇತಿ ಪಡೆಯುತ್ತಿರುವ ಎರಡನೇ ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಜಿ.ಜಗದೀಶ್‌ರನ್ನು ಕೂಡಲೆ ಬಂಧಿಸುವಂತೆ ವಂದೇ ಮಾತರಂ ಜಾಗೃತಿ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ಕಿರಿಯ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ ವ್ಯಾಸಂಗ ಮಾಡುತ್ತಿರುವ ಎರಡನೆ ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದಲ್ಲದೆ ಜಾತಿ ನಿಂದನೆ ಮಾಡಿರುವ ಡಾ.ಜಗದೀಶ್ ಮೇಲೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದರೂ ಇನ್ನು ಬಂಧಿಸಿಲ್ಲವೇಕೆ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು ಸರ್ಕಾರಿ ವೈದ್ಯರ ಖಾಸಗಿ ಕ್ಲಿನಿಕ್‌ಗಳ ಮೇಲೆಯೂ ದಾಳಿ ನಡೆಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಆಗ್ರಹಿಸಿದರು.

ವಂದೇ ಮಾತರಂ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ನಗರಾಧ್ಯಕ್ಷ ರವಿ, ಉಪಾಧ್ಯಕ್ಷ ಅಂಜನಮೂರ್ತಿ, ತಾಲೂಕು ಅಧ್ಯಕ್ಷ ಟಿ.ಆನಂದ್, ಹನುಮಂತರಾಯ, ವೀಣ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.