ಚಿತ್ರದುರ್ಗ:ಕೋವಿಡ್-19 ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಆಗಸ್ಟ್ 01 ರಂದು ಆಚರಿಸುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ವಿಧಿಸಲಾಗಿದ್ದು, ಕೆಲವು ಮುನ್ನೆಚರಿಕೆ ಕ್ರಮಗಳನ್ನು ಅನುಸರಿಸಿ ಮಸೀದಿಗಳಲ್ಲಿಯೇ ಪ್ರಾರ್ಥಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಸೂಚನೆ ನೀಡಿದೆ.

ಜಿಲ್ಲೆಯಾದ್ಯಂತ ಆಗಸ್ಟ್ 01 ರಂದು ಬಕ್ರೀದ್ ಆಚರಣೆ ಪ್ರಯುಕ್ತ ಈದ್ಗಾ ಮೈದಾನದಲ್ಲಿ ನೆಡೆಯುವ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚರಿಕೆ ಕ್ರಮಗಳನ್ನು ಕೈಗೊಂಡು ಮಸೀದಿಗಳಲ್ಲಿ 50 ಜನರಂತೆ ಎರಡು ಅಥವಾ ಮೂರು ತಂಡಗಳಾಗಿ ಪ್ರಾರ್ಥನೆಯನ್ನು ಸಲ್ಲಿಸಬಹುದು.

ಪ್ರಾರ್ಥನಾ ಸ್ಥಳಗಳಲ್ಲಿ ಪ್ರತಿಯೊಬ್ಬರೂ ಮಾಸ್ಕನ್ನು ಕಡ್ಡಾಯವಾಗಿ ಧರಿಸಬೇಕು, 60 ವರ್ಷ ಮೇಲ್ಪಟ್ಟ ಹಿರಿಯರು ಮತ್ತು  10 ವರ್ಷದೊಳಗಿನ ಮಕ್ಕಳು ಮಸೀದಿಗಳಿಗೆ ಹೋಗದೆ ತಮ್ಮ ತಮ್ಮ ಮನೆಗಳಲ್ಲಿ ಪ್ರಾರ್ಥನೆ ಸಲ್ಲಿಸಬೇಕು. ನಮಾಜ್ ನಿರ್ವಹಿಸುವವರ ಮಧ್ಯೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು, ಮಸೀದಿ ಪ್ರವೇಶಿಸುವ ಮುನ್ನ ದೇಹದ ತಾಪಮಾನವನ್ನು ತಪಾಸಣೆ ಮಾಡಿಸಬೇಕು, ಕೈಗಳನ್ನು ಸಾಬೂನು ಅಥಾವಾ ಸ್ಯಾನಿಟೈಸರ್‍ನಿಂದ ಸ್ವಚ್ಚಗೊಳಿಸಬೇಕು, ಮಸೀದಿಗಳಲ್ಲಿರುವ ಧಾರ್ಮಿಕ ಗ್ರಂಥಗಳನ್ನು ಮುಟ್ಟುವಂತಿಲ್ಲ, ತಮ್ಮ ತಮ್ಮ ಮನೆಗಳಿಂದ ಮುಸಲ್ಲಾವನ್ನು (ಜಾಯನಮಾಜ್) ಕಡ್ಡಾಯವಾಗಿ ತರಬೇಕು, ಹಸ್ತಲಾಘವ ಮತ್ತು ಆಲಿಂಗನ ಮಾಡುವಂತಿಲ್ಲ. ಅಪರಿಚಿತರು ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ಬಂದಲ್ಲಿ, ಸಂಬಂಧಪಟ್ಟವರು ಅವರ ಬಗ್ಗೆ ವಿಶೇಷ ಗಮನ ಹರಿಸಬೇಕು ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಕೆ.ಅನ್ವರ್ ಬಾಷಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ಸಾಂದರ್ಭಿಕ ಚಿತ್ರ)