ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮಳೆಯಾಧಾರಿತ ಕೃಷಿಯನ್ನು ಹೊಂದಿರುವ ಜಿಲ್ಲೆಯಾಗಿದ್ದು, ಜಿಲ್ಲೆಯಲ್ಲಿ ಕೈಗಾರಿಕೆ, ಆರೋಗ್ಯ, ಶಿಕ್ಷಣ ಮತ್ತು ಇತರ ಅಭಿವೃದ್ದಿ ಕಾಮಗಾರಿಗಳ ಬಗ್ಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಸನ್ವಯ ಸಮಿತಿ ಸಭೆ ನಡೆಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕೆಂದು ಸರ್ಕಾರದ ಕಾರ್ಯದರ್ಶಿಗಳು, ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಪಂಕಜ್‍ಕುಮಾರ್ ಪಾಂಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜುಲೈ 4 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ವಿವಿಧ ಅಭಿವೃದ್ದಿ ಅನುಷ್ಠಾನ ಹಾಗೂ ಪ್ರಗತಿ ವಿಷಯಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲೆಗೆ ಪ್ರಸಕ್ತ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದ್ದರೂ ಪ್ರಾರಂಭದಲ್ಲಿ ಬಂದ ಮಳೆ ಇತ್ತೀಚೆಗೆ ಕಡಿಮೆಯಾಗಿ ಮುಂಗಾರು ಬೆಳೆಗಳಿಗೆ ನೀರಿನ ಕೊರತೆಯುಂಟಾಗಿದೆ ಎಂದು ಜಂಟಿ ಕೃಷಿನಿರ್ದೇಶಕ ಲಕ್ಷ್ಮಣ್ ಕಳ್ಳೆನ್ನವರ್ ಸಭೆಗೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ 358340 ಹೆಕ್ಟೇರ್ ಬಿತ್ತನೆ ಗುರಿಯಿದ್ದು ಈವರೆಗೆ 88235 ಹೆಕ್ಟೇರ್ ಮಾತ್ರ ಬಿತ್ತನೆಯಾಗಿ, ಶೇ.24.6 ಸಾಧನೆಯಾಗಿದೆ ಎಂದು ಅವರು ತಿಳಿಸಿದರು.
ಮುಖ್ಯವಾಗಿ ಶೇಂಗಾ, ಮೆಕ್ಕೆಜೋಳ, ರಾಗಿ, ತೊಗರಿ ಬೆಳೆಯನ್ನು ಬೆಳೆಯಲಾಗುತ್ತಿದ್ದು ಬಿತ್ತನೆ ಬೀಜ ಹಾಗೂ ಗೊಬ್ಬರಗಳ ದಾಸ್ತಾನು ಇದೆ ಎಂದು ಮಾಹಿತಿ ನೀಡಿದರು.
ಕಳೆದ ವರ್ಷ 64.79 ಕೋಟಿ ಬೆಳೆ ವಿಮೆ ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗಿದೆ ಎಂದು ಅವರು ತಿಳಿಸಿದರು. ಕಡ್ಲೆ, ರಾಗಿ ಮತ್ತು ಶೇಂಗಾವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಾಗಿದೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ 1.41 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳಿದ್ದು, ವಿವಿಧ ಯೋಜನೆಗಳಿಡಿಯಲ್ಲಿ 4956 ಫಲಾನುಭವಿಗಳು ಸರ್ಕಾರದ ಯೋಜನೆಗಳ ಲಾಭ ಪಡೆದಿದ್ದಾರೆಂದು ತೋಟಗಾರಿಕೆ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನ ಮಾತನಾಡಿ ಶಿಕ್ಷಣ ಒಂದು ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಯಾಗಿದ್ದು, ವಿದ್ಯಾಶಕ್ತಿಯಿಂದ ಮಕ್ಕಳನ್ನು ಪುನ: ಶಾಲೆಗೆ ಕರೆತರುವ ಯೋಜನೆ ಜಾರಿಯಲ್ಲಿದ್ದು, ಇದರ ಬಗ್ಗೆ ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು. ಕೃಷಿ ಆಧಾರಿತ ಕೈಗಾರಿಕೆಗಳನ್ನು ಜಿಲ್ಲೆಯಲ್ಲಿ ಬೆಳೆಸಬೇಕು. ಜಿಲ್ಲೆಯಲ್ಲಿ ಕೈಗಾರಿಕಾ ಅಭಿವೃದ್ದಿಗೆ ಶ್ರಮಿಸಿ ವಿವಿಧ ರೀತಿಯ ಕೈಗಾರಿಕೆಗಳನ್ನು ಹುಟ್ಟುಹಾಕಿ ದುಡಿಯುವ ಕೈಗಳಿಗೆ ಉದ್ಯೋಗ ನೀಡುವಂತಾಗಬೇಕು. ಪ್ರಸಕ್ತ ವರ್ಷ ಪ್ರತಿ ತಾಲ್ಲೂಕಿನಲ್ಲಿ 40 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಯೋಜನೆ ರೂಪಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ ಲಕ್ಷ್ಮಣ ಅರೆಸಿದ್ದಿ, ಉಪವಿಭಾಗಾಧಿಕಾರಿ ವಿಜಯಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.