ಚಿತ್ರದುರ್ಗ :  ಕಳೆದ ಆರ್ಥಿಕ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳ ಅನುದಾನ ಬಳಕೆಯಾಗದೆ ವಾಪಾಸ್ಸು ಆಗಿರುವುದಕ್ಕೆ ಕಾರಣಗಳೇನು ಎಂಬುದನ್ನು ಪರಿಶೀಲಿಸಿ ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಸುರೇಶ್‍ಬಾಬು ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಪಂಚಾಯತ್ ವಿಶೇಷ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಲ್ಲಿ ಸುಮಾರು 25 ಕೋಟಿ 81 ಲಕ್ಷ ಅನುದಾನ ವಾಪಾಸ್ಸು ಹೋಗಿದ್ದು, ಇದರ ಜೊತೆಗೆ ಶಿಕ್ಷಣ, ಆರೋಗ್ಯ, ಯುವಜನಸೇವಾ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅನುದಾನವೂ ಸರ್ಕಾರಕ್ಕೆ ವಾಪಾಸ್ಸು ಆಗಿದೆ. ಹಾಗಾಗಿ ಅಧಿಕಾರಿಗಳು ನಿರ್ಲಕ್ಷೆ ಮಾಡದೇ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಕೆಲಸಮಾಡಬೇಕು ಎಂದು ತಾಕೀತು ಮಾಡಿದರು.

ಅನುದಾನ ಲ್ಯಾಪ್ಸ್ ಆಗದಂತೆ ಎಚ್ಚರಿಕೆ ವಹಿಸುವಂತೆ ಕಳೆದ ಬಾರಿಯ ಸಭೆಯಲ್ಲಿ ಈ ಕುರಿತು ಚರ್ಚೆ ಮಾಡಿ, ಜಿಲ್ಲೆಯ ಅಭಿವೃದ್ಧಿಗೆ ಮೀಸಲಾಗಿರುವ ಅನುದಾನವನ್ನು ಖರ್ಚು ಮಾಡಬೇಕು ಎಂದು ಸೂಚಿಸಲಾಗಿತ್ತು. ಆದಾಗ್ಯೂ ದೊಡ್ಡಮಟ್ಟದಲ್ಲಿ ಅನುದಾನ ಲ್ಯಾಪ್ಸ್ ಆಗಿದೆ. ಕಳೆದ ಜೂನ್ ತಿಂಗಳಲ್ಲಿ ಕಾಮಗಾರಿಗೆ ಅನುಮೋದನೆ ಆಗಿದೆ. ಆದರೂ ಅನುದಾನ ವಾಪಾಸ್ಸು ಹೋಗಿದೆ. ಇದು ಜಿಲ್ಲೆಗೆ ಆದ ನಷ್ಟ ಎಂದು ಜಿಲ್ಲಾ ಪಂಚಾಯತ್ ಸದಸ್ಯರಾದ ಸೌಭಾಗ್ಯ ಬಸವರಾಜನ್ ಹಾಗೂ ಗುರುಮೂರ್ತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.