ಚಿತ್ರದುರ್ಗ: ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಕೋಮುವಾದಿಯಿಂದ ಬೇಸತ್ತಿರುವ ರಾಜ್ಯದ ಜನತೆ ಮುಂದಿನ ತಿಂಗಳು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಎ.ಐ.ಸಿ.ಸಿ.ಯಿಂದ ಚಿತ್ರದುರ್ಗ ಜಿಲ್ಲೆಗೆ ಚುನಾವಣಾ ವೀಕ್ಷಕರಾಗಿ ನೇಮಕಗೊಂಡಿರುವ ತುಳಸಿರೆಡ್ಡಿ ಹೇಳಿದರು.

ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಐದು ವರ್ಷಗಳ ಕಾಲ ಆಡಳಿತ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡವರಿಗಾಗಿ ಜಾರಿಗೆ ತಂದಿರುವ ಅನೇಕ ಜನಪರ ಯೋಜನೆಗಳು ಜನರ ಮನಸ್ಸನ್ನು ಗೆದ್ದಿರುವುದರಿಂದ ಮತ್ತೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಈ ಹಿಂದೆ ರಾಜ್ಯದಲ್ಲಿ ಅಧಿಕಾರ ನಡೆಸಿದ ಸಮ್ಮಿಶ್ರ ಸರ್ಕಾರ ಜೆಡಿಎಸ್ ಮತ್ತು ಬಿಜೆಪಿ. ಭ್ರಷ್ಠಾಚಾರದಲ್ಲಿ ಮುಳುಗಿತ್ತು. ಅದೇ ರೀತಿ ದೇಶದ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪೂರ್ವದಲ್ಲಿ ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ಭಾರತದ ಪ್ರತಿಯೊಬ್ಬ ಬಡವರ ಬ್ಯಾಂಕ್ ಖಾತೆಗೆ ಹದಿನೈದು ಲಕ್ಷ ರೂ.ಗಳನ್ನು ಜಮಾ ಮಾಡುವುದಾಗಿ ಹೇಳಿ ಇದುವರೆವಿಗೂ ನಯಾಪೈಸೆಯನ್ನು ಜಮಾ ಮಾಡಿಲ್ಲ. ಸುಳ್ಳು ಹೇಳುತ್ತ ದೇಶದ ಜನರನ್ನು ವಂಚಿಸುವುದೇ ಬಿಜೆಪಿ ಸಾಧನೆ ಎಂದು ವ್ಯಂಗ್ಯವಾಡಿದರು.

ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಯುವಕರಿಗೆ ನಂಬಿಸಿ ಎರಡು ಲಕ್ಷ ಉದ್ಯೋಗ ನೀಡಲು ಆಗಲಿಲ್ಲ. ಐದು ನೂರು ಹಾಗೂ ಒಂದು ಸಾವಿರ ರೂ.ಮುಖಬೆಲೆಯ ನೋಟುಗಳ ಚಲಾವಣೆಯನ್ನು ರದ್ದುಪಡಿಸಿ ಬಡವರು, ಮಧ್ಯಮ ವರ್ಗದವರು ನಲುಗುಂತೆ ಮಾಡಿರುವ ಕೇಂದ್ರ ಬಿಜೆಪಿ ವಿರುದ್ದ ದೇಶದ ಜನತೆಗೆ ಆಕ್ರೋಶವಿದೆ. ಸರಕು ಮತ್ತು ಸೇವಾ ತೆರಿಗೆ ಏರಿಕೆ, ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ, ಇವೆಲ್ಲಾ ಕಾರಣಗಳಿಂದ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲುವುದು ಖಂಡಿತ. ೨೦೧೯ ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿಯೂ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

ಅನ್ನಭಾಗ್ಯ, ಕ್ಷೀರಭಾಗ್ಯ, ಪಶುಭಾಗ್ಯ, ಕೃಷಿಭಾಗ್ಯ, ಶಾದಿಭಾಗ್ಯ, ಬಡ ಮಕ್ಕಳಿಗೆ ವಿದ್ಯಾಸಿರಿ ಹೀಗೆ ಸಾಲು ಸಾಲು ಭಾಗ್ಯಗಳನ್ನು ರಾಜ್ಯದ ಜನರಿಗೆ ಕೊಡುಗೆಯಾಗಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಐದು ವರ್ಷಗಳ ಅವಧಿಯಲ್ಲಿ ಎಲ್ಲಿಯೂ ಒಂದು ಸಣ್ಣ ಅಹಿತಕರ ಘಟನೆಗಳು ನಡೆದಿಲ್ಲ. ಬಿಜೆಪಿ ಜೆಡಿಎಸ್.ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿತ್ತು. ಕಾಂಗ್ರೆಸ್‌ನಿಂದ ಮಾತ್ರ ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗಲಿದೆ. ಹಾಗಾಗಿ ಸಿದ್ದರಾಮಯ್ಯನವರ ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಮನೆ ಮನೆಗೆ ಹೋಗಿ ಪಕ್ಷದ ಪರವಾಗಿ ಮತಯಾಚಿಸಿ ಜಿಲ್ಲೆಯಲ್ಲಿ ಆರಕ್ಕೆ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹನುಮಲಿ ಷಣ್ಮುಖಪ್ಪ, ಮೆಹಬೂಬ್‌ಪಾಷ, ಡಿ.ಎನ್.ಮೈಲಾರಪ್ಪ, ಎಸ್.ಎಂ.ಎಸ್.ಟಿ.ಫಯಾಜ್, ಮೆಹಬೂಬ್ ಖಾತೂನ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್‌ಅಲ್ಲಾ ಭಕ್ಷ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಮಹಡಿ ಶಿವಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.