ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕವಿತಾ ಎಸ್.ಮಣ್ಣಿಕೇರಿ ಬುಧವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಆರ್.ವಿನೋತ್ ಪ್ರಿಯಾ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಚಿತ್ರದುರ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕುಟುಂಬದಂತೆ ಕಾರ್ಯನಿರ್ವಹಿಸಲು ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಸಹಕಾರ ನೀಡಬೇಕು ಎಂದು ನೂತನ ಜಿಲ್ಲಾಧಿಕಾರಿಗಳಾದ ಕವಿತಾ ಎಸ್. ಮಣ್ಣಿಕೇರಿ ಜಿಲ್ಲೆಯ ಅಧಿಕಾರಿಗಳಿಗೆ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನೂತನ ಜಿಲ್ಲಾಧಿಕಾರಿಗಳ ಅಧಿಕಾರ ಸ್ವೀಕಾರ ಹಾಗೂ ನಿರ್ಗಮಿತ ಜಿಲ್ಲಾಧಿಕಾರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಕೋವಿಡ್-19 ಸೋಂಕು ಹರಡುವಿಕೆ ಮತ್ತು ತಡೆಗಟ್ಟುವಲ್ಲಿ ಜಿಲ್ಲೆಯ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಹಾಗಾಗಿ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳೂ ಕಡಿಮೆ ಸಂಖ್ಯೆಯಲ್ಲಿರುವುದು ಸಂತೋಷದ ಸಂಗತಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಾನು ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಾಗಿ ಕಾರ್ಯನಿರ್ವಹಿಸಿದ್ದೇನೆ. ಈಗ ಐತಿಹಾಸಿಕ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದೇನೆ. ಎಲ್ಲ ಇಲಾಖೆಯ ಅಧಿಕಾರಿಗಳು ಹಿಂದಿನ ಜಿಲ್ಲಾಧಿಕಾರಿಗಳಿಗೆ ನೀಡಿದ ಸಹಕಾರವನ್ನು ತಮಗೂ ಉತ್ತಮವಾಗಿ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಉಪವಿಭಾಗಾಧಿಕಾರಿ ಪ್ರಸನ್ನ, ಬಿಸಿಎಂ ಅಧಿಕಾರಿ ಅವಿನ್, ಆಹಾರ ಇಲಾಖೆ ಉಪನಿರ್ದೇಶಕ ಮಧುಸೂಧನ್ ಕಾರ್ಯಕ್ರಮ ಕುರಿತು ಮಾತನಾಡಿದರು.  ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.