ಚಿತ್ರದುರ್ಗ: ದೇಶದ ಪ್ರಧಾನಿ ನರೇಂದ್ರಮೋದಿರವರು ಮೇ.೬ ರಂದು ಪ್ರಥಮ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಲಿದ್ದು, ಅಂದು ಬೆಳಿಗ್ಗೆ ೧೦-೩೦ ರಿಂದ ೧೧-೩೦ ರವರೆಗೆ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಜಿಲ್ಲೆಯ ಆರು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ ಎಂದು ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್ ತಿಳಿಸಿದರು.
ಬಿಜೆಪಿ. ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚಿತ್ರದುರ್ಗ, ದಾವಣಗೆರೆ ವಿಧಾನಸಭಾ ಕ್ಷೇತ್ರ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಹಾಗೂ ಕಾರ್ಯಕರ್ತರು ಸೇರಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಗಾಂಧಿವೃತ್ತದಿಂದ ಮದಕರಿನಾಯಕನ ಪ್ರತಿಮೆವರೆಗೆ ರೋಡ್‌ಶೋ ನಡೆಸಲು ಕೇಳುತ್ತೇವೆ. ಒಪ್ಪಿದರೆ ರೋಡ್‌ಶೋ ನಡೆಸಲಾಗುವುದು ಎಂದರು.
ಬಿಜೆಪಿ.ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ. ಬಿ.ಶ್ರೀರಾಮುಲು, ಕೇಂದ್ರದ ಯಾರಾದರು ಒಬ್ಬ ಸಚಿವರು ಆಗಮಿಸಲಿದ್ದಾರೆ. ಮಧ್ಯಕರ್ನಾಟಕದ ಜ್ವಲಂತ ಸಮಸ್ಯೆಗಳು ಕುರಿತು ಪ್ರಧಾನಿ ಮೋದಿ ಭಾಷಣದಲ್ಲಿ ಮಾತನಾಡುವರು. ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯ ಅಭಿವೃದ್ದಿಗೆ ಸಂಬಂಧಿಸಿದಂತೆ ಮೂರು ಪುಟಗಳ ವರದಿಯನ್ನು ಪ್ರಧಾನಿಗೆ ಸಲ್ಲಿಸಲಾಗುವುದು ಎಂದು ಹೇಳಿದರು.
ವಿಭಾಗೀಯ ಸಹ ಪ್ರಭಾರಿ ಜಿ.ಎಂ.ಸುರೇಶ್, ಜಿಲ್ಲಾ ಚುನಾವಣಾ ಸಂಚಾಲಕ ಟಿ.ಜಿ.ನರೇಂದ್ರನಾಥ್, ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್, ರತ್ನಮ್ಮ, ವಕ್ತಾರ ನಾಗರಾಜ್‌ಬೇದ್ರೆ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.