ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಕಾಲೇಜುಗಳಿಗೆ ಸೂಚನೆ ನೀಡಿದೆ.

ಪ್ರಥಮ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕಾಲೇಜು ಹಂತದಲ್ಲಿ ಪರೀಕ್ಷೆ ಆಯೋಜಿಸಲಾಗುತ್ತದೆ. ಶುಲ್ಕ ಪಾವತಿ ಹಾಗೂ ಪರೀಕ್ಷಾ ದಿನಾಂಕಗಳನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಅದಕ್ಕೂ ಮೊದಲು ಪರೀಕ್ಷೆ ನಡೆಸಲು ಸಿದ್ಧರಾಗಿ ಎಂದು ಇಲಾಖೆ ತಿಳಿಸಿದೆ.

ಸ್ಥಳೀಯ ಸನ್ನಿವೇಶಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಕೂಲವಾಗಿರುವಂತೆ ವೇಳಾಪಟ್ಟಿ ಸಿದ್ಧಪಡಿಸಿಕೊಂಡು ಸೀಮಿತ ಅವಧಿಯೊಳಗೆ ಪರೀಕ್ಷೆ ನಡೆಸಬೇಕು. ಕೊರೊನಾ ಹಿನ್ನೆಲೆ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಪರೀಕ್ಷೆಗೆ ಹಾಜರಾಗುವಂತೆ ಮಾಡುವ ಜವಾಬ್ದಾರಿ ಪ್ರಾಂಶುಪಾಲರದ್ದಾಗಿರುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.