ಬೆಂಗಳೂರು : ರಾಜ್ಯದಲ್ಲಿ ಈವರೆಗೆ 124 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ದೇಶದಲ್ಲಿ ರಾಜ್ಯ 9ನೇ ಸ್ಥಾನದಲ್ಲಿದೆ. ಎಲ್ಲ ರಾಜ್ಯಗಳಲ್ಲೂ ಯಾವುದೇ ಕಾರಣಕ್ಕೂ ಲಾಕ್ ಡೌನ್ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಸಿಎಂಗೆ ಸೂಚನೆ ನೀಡಿದ್ದಾರೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಇಂದು ಪ್ರಧಾನಿ ಮೋದಿ ಅವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ಉಲ್ಲಂಘನೆಯಾಗಬಾರದೆಂದು ಸೂಚನೆ ಕೊಟ್ಟಿದ್ದಾರೆ. ಲಾಕ್ ಡೌನ್ ಬಳಿಕ ಏ.14ರ ನಂತರ ನಿರ್ಧಾರ ಕೈಗೊಳ್ಳಲಾಗುವುದೆಂದು ಪ್ರಧಾನಿ ತಿಳಿಸಿದರು ಎಂದು ವಿವರಿಸಿದರು.

ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ತ್ವರಿತಗತಿಯಲ್ಲಿ ಪತ್ತೆ ಹಚ್ಚಿ ಐಸೋಲೇಷನ್ ಒದಗಿಸಬೇಕು. ವೈದ್ಯಕೀಯ ಸಿಬ್ಬಂದಿ ಕೊರತೆಯಿದ್ದಲ್ಲಿ ಪರ್ಯಾಯ ವೈದ್ಯಕೀಯ ಸಿಬ್ಬಂದಿ ಬಳಕೆ ಮಾಡಿಕೊಳ್ಳಿ. ಕೇಂದ್ರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಪ್ರಧಾನಿ ತಿಳಿಸಿದರು.

ಇನ್ನು ಕೊರೊನಾ ತಡೆಗೆ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಕಾರ್ಯಕರ್ತರನ್ನು ಬಳಕೆ ಮಾಡಿಕೊಳ್ಳಬೇಕು. ಎಲ್ಲ ರಾಜ್ಯಗಳಲ್ಲಿ ಅಗತ್ಯ ವಸ್ತುಗಳ ಪೂರೈಕೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು. ಕೃಷಿ ಚಟುವಟಿಕೆಗಳಿಗೆ ಲಾಕ್ ಡೌನ್ ನಿಂದ ವಿನಾಯಿತಿ ನೀಡಬೇಕು. ಯಾವುದೇ ಅನಾಹುತ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕೆಂದು ಪ್ರಧಾನಿ ಸಲಹೆ ಕೊಟ್ಟಿದ್ದಾರೆ ಎಂದು ಹೇಳಿದರು.