ಬೆಂಗಳೂರು: ಗಣೇಶ ಚತುರ್ಥಿ ಹಬ್ಬವು ಆಗಸ್ಟ್ 22 ರಂದು ಆಚರಣೆಗೆ ಬರಲಿದ್ದು, ಈ ಹಬ್ಬವನ್ನು ರಾಜ್ಯದಲ್ಲಿ ಪಾರಂಪರಿಕವಾಗಿ ಪ್ರತಿ ವರ್ಷವೂ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಹರಡಿರುವುದರಿಂದ ಗಣೇಶೋತ್ಸವ  ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ಆಚರಿಸಬೇಕಾಗಿರುತ್ತದೆ.

ಈ  ಹಿನ್ನಲೆಯಲ್ಲಿ ಗಣೇಶೋತ್ಸವ ಆಚರಿಸುವ ಸಂಬಂಧ ರಾಜ್ಯ ಸರ್ಕಾರವು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಈ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಗಣೇಶನ ಹಬ್ಬವನ್ನು ಶ್ರದ್ದಾ ಭಕ್ತಿಯಿಂದ ಆಚರಿಸುವುದರ ಜೊತೆಗೆ ಪ್ರಕೃತಿಯ ಹಾಗೂ ಪರಿಸರದ ನಿಯಮಗಳನ್ನು ಉಲ್ಲಂಘಿಸದಂತೆ ನೋಡಿಕೊಳ್ಳಲು ಜವಾಬ್ದಾರಿಯುತ ನಾಗರಿಕರಲ್ಲಿ ಮನವಿ ಮಾಡಲಾಗಿದೆ.

ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಗಳಲ್ಲಿಯೇ ಆಚರಿಸುವುದು. ಮನೆಯಲ್ಲಿ ಪ್ರತಿಷ್ಠಾಪಿಸಿದ  ಗಣೇಶ ಮೂರ್ತಿಗಳನ್ನು ಅವರ ಮನೆ ಆವರಣದಲ್ಲಿಯೇ ಬಕೇಟ್ ನೀರಿನಲ್ಲಿ ವಿಸರ್ಜನೆ ಮಾಡುವುದು. ಗಣೇಶ ಹಬ್ಬ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಕಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ದರ್ಶನಕ್ಕಾಗಿ ಬರುವ ಭಕ್ತರಿಗೆ ಕನಿಷ್ಟ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು  ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ  ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು. ದೇವಸ್ಥಾನಕ್ಕೆ ಆಗಮಿಸುವ ಭಕ್ತಾಧಿಗಳು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸತಕ್ಕದ್ದು. ಸಾರ್ವಜನಿಕರ ಆರೋಗ್ಯ ದೃಷ್ಠಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ನಗರಸಭೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು. ಪ್ಲಾಸ್ಟಿಕ್ ರಹಿತ ವಸ್ತುಗಳ ಬದಲಿಗೆ  ಹೂವು ಪತ್ರೆಗಳಿಂದ ಅಲಂಕರಿಸಿ ಮೂರ್ತಿಯನ್ನು ಪೂಜಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಅರಿಶಿಣ ಗಣೇಶ: ಕೊರೊನಾ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ  ವೈರಾಣು ನಿರೋಧಕ ಶಕ್ತಿ ಹೊಂದಿರುವ ಅರಿಶಿಣದಿಂದ ಗಣೇಶ ಮೂರ್ತಿಯನ್ನು ತಯಾರಿಸಿ, ಪೂಜಿಸಿ, ಮನೆಯಲ್ಲಿಯೇ ವಿಸರ್ಜಿಸುವುದು. ಈ ಬಾರಿ  ಗಣೇಶ ಹಬ್ಬಕ್ಕೆ ಕೋವಿಡ್ ನಿರೋಧಕ ಪ್ರತಿಮೆಗಳನ್ನು ತಯಾರಿಸುವ ಮೂಲಕ ಪರಿಸರಕ್ಕೆ ನಮ್ಮದೇ ಆದ ಕೊಡುಗೆ ನೀಡೋಣ ಎಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸಲಹೆ ನೀಡಿದೆ.

ರೋಗ ನಿರೋಧಕ ಶಕ್ತಿಯುಳ್ಳ ಸಗಣಿ, ಅರಿಶಿಣ ಬಳಕೆಯಿಂದ ಈ ಬಾರಿ ಗಣೇಶನ ಪ್ರತಿಮೆಯನ್ನು ಮನೆಲ್ಲಿಯೇ ಮಾಡಿಕೊಂಡು ಪೂಜಿಸುವುದರಿಂದ ಸಾರ್ವಜನಿಕರು ಪರಿಸರಕ್ಕೆ ಅಪಾರ ಕೊಡುಗೆ ನೀಡಬಹುದಾಗಿದೆ.

ಅರಿಶಿಣ ಗಣಪತಿ ಮಾಡುವ ವಿಧಾನ: ಮೊದಲು ಅರಿಶಿಣ ಹಾಗೂ ಮೈದಾ  ಹಿಟ್ಟಿಗೆ ನೀರು ಮಿಶ್ರಣ ಮಾಡಿ ಹದವಾಗಿ ಮಾಡಿಕೊಂಡು ಗಣೇಶನ ಆಕಾರ ನೀಡಬೇಕು. ಸೋಂಡಿಲನ್ನು ಮಾಡಿದ ಬಳಿಕ ಮೆಣಸಿನಕಾಳನ್ನು ಬಳಸಿ ಮೂರ್ತಿಗೆ ಕಣ್ಣು ನೀಡಬಹುದು. ಹೆಚ್ಚಿನ ಮಾಹಿತಿಗಾಗಿ www.facebook/kspcbofficial ನೋಡುವುದು.