ಬಾಗಲಕೋಟೆ: ನನ್ನ ಸಾರ್ವಜನಿಕ ಜೀವನದಲ್ಲಿ 13 ಚುನಾವಣೆಗಳನ್ನು ಎದುರಿಸಿದ್ದೇನೆ. ಎಂಟು ಬಾರಿ ಗೆಲುವು ಸಾಧಿಸಿದ್ದೇನೆ. ಐದು ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸಿದ್ದೇನೆ. ಇನ್ನು ಮುಂದೆ ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಾದಾಮಿ ತಾಲೂಕಿನ ಗುಳೇದಗುಡ್ಡ ಪಟ್ಟಣದಲ್ಲಿ ನೂತನ ಪುರಸಭಾ ಸದಸ್ಯರಿಗೆ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಾ, ನಾನು ಬಾದಾಮಿ ಕ್ಷೇತ್ರದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆದುದರಿಂದ, ನಾನು ಉತ್ತರ ಕರ್ನಾಟಕದವನೆ. ಈಗಾಗಲೇ ಆರು ತಿಂಗಳು ಕಳೆದಿದೆ. ಇನ್ನುಳಿದ ನಾಲ್ಕೂವರೆ ವರ್ಷ ಇಲ್ಲೇ ಇರುತ್ತೇನೆ. ಈ ಕ್ಷೇತ್ರದ ಅಭಿವೃದ್ಧಿ ಮಾಡುವುದು ನನ್ನ ಕರ್ತವ್ಯ. ಮತ್ತೆ ಯಾವುದೇ ಚುನಾವಣೆಯಲ್ಲಿ ನಿಲ್ಲುವುದಿಲ್ಲ. ಈಗ ನನಗೆ ವಯಸ್ಸು 71 ವರ್ಷ ಆಯಿತು ಎಂದು ಅವರು ಸ್ಪಷ್ಟಪಡಿಸಿದರು