ಬೆಂಗಳೂರು: ಬೆಳಿಗ್ಗೆ ಯಿಂದ ಮೋಡ ಮುಸುಕಿದ ವಾತಾವರಣ ಇರುವುದರಿಂದ ರಾಜ್ಯದಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶಿವರಾತ್ರಿ ಹಬ್ಬ ಆಚರಣೆ ಮಾಡುವುದಕ್ಕೆ ಇನ್ನೇನು ಕೆಲವೇ ದಿವಸಗಳು ಬಾಕಿ ಉಳಿದಿವೆ. ಈ ನಡುವೆ ರಾಜ್ಯದಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಇರುವ ಹಿನ್ನಲೆಯಲ್ಲಿ ಇಂದು ಹಾಗೂ ನಾಳೆ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆ ಕೂಡ ಆಗುವ ಸಾಧ್ಯತೆ ಇದೆ. ತಮಿಳುನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.