ಬೆಂಗಳೂರು : ದೇಶಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದ್ದು, ರಾಜ್ಯದ ಮಸೀದಿಗಳಲ್ಲಿ ನಮಾಜ್ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದನ್ನು ತಡೆಯಲು ವಕ್ಫ್ ಮಂಡಳಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.

ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಿರುವ ಸಂಬಂಧ ಸಲ್ಲಿಸಲಾಗಿರುವ ವಿವಿಧ ಸಾರ್ವಜನಿಕ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದ್ದು, ಕೊರೊನಾ ವೈರಸ್ ಸೋಂಕು ಹರಡುವುದನ್ನು ನಿಯಂತ್ರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ರಾಜ್ಯ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಅವರಿಂದ ಪೀಠ ಸಾಕಷ್ಟು ಮಾಹಿತಿ ಪಡೆದುಕೊಂಡಿತ್ತು.

ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದನ್ನು ಪ್ರಸ್ತಾಪಿಸಿದ ಪೀಠ, ಕೊರೊನಾ ಸೋಂಕು ತಡೆಗಟ್ಟಲು ಕೇಂದ್ರ ಸರ್ಕಾರ ಮಾರ್ಚ್ 24 ರಂದು ನೀಡಿರುವ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದೆ.