ಬೆಂಗಳೂರು: ಇನ್ನು 15 ದಿನಗಳಲ್ಲಿ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ರಾಜ್ಯದ 30 ಜಿಲ್ಲೆಗಳಿಂದ ಆಗಮಿಸಿದ್ದ ರೈತ ಸಂಘಟನೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ ನಂತರ ಈ ವಿಷಯ ಪ್ರಕಟಿಸಿದರು.

2009, ಏಪ್ರಿಲ್ 1ರಿಂದ 2017ರ ಡಿಸೆಂಬರ್ 31 ರವರೆಗೆ ರೈತರು ಮಾಡಿರುವ ಎಲ್ಲಾ ಬೆಳೆ ಸಾಲ‌ಮನ್ನಾ, ಶ್ರೀಮಂತ ರೈತರು, 3 ವರ್ಷದ ಆದಾಯ ತೆರಿಗೆ ಪಾವತಿಸಿರುವ ರೈತರು, ವ್ಯಾಪಾರದ ಜತೆಗೆ ಕೃಷಿ ಮಾಡುತ್ತಿರುವ ರೈತರ ಸಾಲ ಮನ್ನಾ ಮಾಡಬೇಕೆ, ಕೃಷಿಯೇತರ ಉದ್ದೇಶಕ್ಕೆ ಮಾಡಿರುವ ಸಾಲ ಮನ್ನಾ ಮಾಡಬೇಕೆ ಎಂಬ ಬಗ್ಗೆ ಚರ್ಚಿಸಲಿದ್ದೇವೆ. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಸಲಹೆಯನ್ನೂ ಪಡೆಯಬೇಕಿದ್ದು, ಇನ್ನು 15 ದಿನದೊಳಗೆ ಸೂಕ್ತ ರೀತಿಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ರೈತಮುಖಂಡರು, ಕೃಷಿ ತಜ್ಞರ ಜೊತೆ ಚರ್ಚೆ ನಡೆಸಿ ಇನ್ನು 10-15 ದಿನಗಳಲ್ಲಿ ತೀರ್ಮಾನಕ್ಕೆ ಬರಲಾಗುವುದು ಎಂದರು. ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಬಿಜೆಪಿ ಶಾಸಕ ಗೋವಿಂದ ಕಾರಜೋಳ, ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಸೇರಿ ಅನೇಕ ಶಾಸಕರು, ಅಧಿಕಾರಿಗಳು ಭಾಗಿಯಾಗಿದ್ದರು.