ಬೆಂಗಳೂರು: ಆಸಿಡ್ ದಾಳಿಗೊಳಗಾದ ಎಲ್ಲ ಹೆಣ್ಣು ಮಕ್ಕಳಿಗೆ, ಮಹಿಳೆಯರಿಗೆ ನಿವೇಶನ, ಮನೆ ಹಾಗೂ ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರೂ.ಗಳವರೆಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಕಂದಾಯ ಇಲಾಖೆಯ ಸಾಮಾಜಿಕ ಭದತ್ರೆ ಮತ್ತು ಪಿಂಚಣೆಗಳ ನಿರ್ದೇಶನಾಲಯದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ‘ಹಲೋ ಕಂದಾಯ ಸಚಿವರೇ – 72 ಗಂಟೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ಸಹಾಯವಾಣಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಆಸಿಡ್ ದಾಳಿಗೆ ಒಳಗಾದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗಿದ್ದು, ಅವರ ನೆರವಿಗೆ ನಿಲ್ಲುವುದು ಸರ್ಕಾರದ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಅವರ ಮಾಸಾಶನವನ್ನು 3000ದಿಂದ 10 ಸಾವಿರಕ್ಕೆ ಹೆಚ್ಚಿಸಲಾಗಿದ್ದು, ಇದರೊಂದಿಗೆ ಬದುಕು ಸಾಗಿಸಲು ಮನೆ ಹಾಗೂ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುವುದು ಎಂದರು.

ಇನ್ನು ಆಳುವುದು ಅಂದರೆ ಜನರ ಸಮಸ್ಯೆಗಳನ್ನು ಅರಿತು ಹೃದಯದಿಂದ ಅದಕ್ಕೆ ಪರಿಹಾರ ಕೊಡುವುದು. ಅನುಷ್ಠಾನ ಮಾಡುವುದು ಆಡಳಿತ. ಈ ಚಿಂತನೆಯಿಂದ ಕಂದಾಯ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಕಾರ್ಯರೂಪಕ್ಕೆ ಬಂದಿದೆ. ಇದರಿಂದ ಜನರ ಅಲೆದಾಟ ತಪ್ಪುತ್ತದೆ. 50 ಲಕ್ಷಕ್ಕಿಂತ ಹೆಚ್ಚು ಕುಟುಂಬಗಳಿಗೆ ಇದರಿಂದ ಉಪಯೋಗವಾಗಲಿದೆ ಎಂದು ತಿಳಿಸಿದ್ದಾರೆ.