ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಕೊಳಾಳ್ ಗ್ರಾಮದಲ್ಲಿ ಸೋಮವಾರ ಮಂಗಳಮುಖಿಯರು ವಿಶ್ವ ಜಲ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗಾಗಿ ಉಚಿತ ಕುಡಿಯುವ ನೀರಿನ ಘಟಕ ಪ್ರಾರಂಭಿಸಿದ್ದಾರೆ.
ಕೆಎಸ್ಎಂಎಫ್ ರಾಜ್ಯ ಸಮಿತಿ ಸದಸ್ಯರು ಹಾಗೂ ಅಮರ ಸಾಧಕಿಯರ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಅರುಂಧತಿ ಅವರು ಉಚಿತ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿದರು.
ಉಚಿತ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅಮರ ಸಾಧಕಿಯರ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಅರುಂಧತಿ, ಮಂಗಳಮುಖಿಯರನ್ನು ಸಮಾಜಮುಖಿಯಾಗಿ ಬದುಕಲು ಬಿಡಬೇಕು. ನಾವೂ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು.
ಈಗಾಗಲೇ ಬೇಸಿಗೆ ಪ್ರಾರಂಭವಾಗಿರುವುದರಿಂದ ಕೂಲಿಕಾರ್ಮಿಕರು, ದಾರಿ ಹೋಕರು, ಲಾರಿ ಚಾಲಕರು ಹಾಗೂ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಉಚಿತವಾಗಿ ಶುದ್ಧ ಕುಡಿಯುವ ನೀರನ್ನು ನೀಡಲಾಗುತ್ತಿದೆ ಎಂದರು.
ಮಂಗಳಿಮುಖಿಯರ ಈ ಉತ್ತಮ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಲಕ್ಷ್ಮಿ, ರೇಖಾ, ಚೈತ್ರಾ, ಕಿರಣ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.