ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ತಾತ್ಕಾಲಿಕವಾಗಿ 18 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ಕೋವಿಡ್-19 ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆ ರಾಜ್ಯದಲ್ಲಿ ಭೌತಿಕ ತರಗತಿಗಳನ್ನು ಆರಂಭಿಸಲಾಗಿದೆ. ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರ ಸೇವೆ ಪಡೆದುಕೊಳ್ಳಲಾಗುತ್ತದೆ. 2022ರ ಮಾರ್ಚ್ ತಿಂಗಳವರೆಗೆ ಅಥವಾ ಪ್ರಸಕ್ತ ಸಾಲಿನ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಅತಿಥಿ ಶಿಕ್ಷಕರ ಸೇವೆ ಪಡೆದುಕೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಮಕ್ಕಳ ಕೋವ್ಯಾಕ್ಸಿನ್‌ ಲಸಿಕೆಗೂ ತ್ವರಿತ ಅನುಮೋದನೆ ಸಾಧ್ಯತೆ: ಸೌಮ್ಯ ಸ್ವಾಮಿನಾಥನ್‌

ಕೋವಿಡ್-19 ಸುರಕ್ಷತಾ ಕ್ರಮಗಳ ಪಾಲನೆಯೊಂದಿಗೆ ನವೆಂಬರ್ 8 ರಿಂದ ರಾಜ್ಯದಲ್ಲಿ ಎಲ್‌ಕೆ‌ಜಿ ಮತ್ತು ಯುಕೆಜಿ ತರಗತಿಗಳ ಆರಂಭಕ್ಕೆ ಅನುಮತಿ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಶಾಲೆಗೆ ಆಗಮಿಸುವ ಪ್ರತಿಯೊಂದು ಮಗುವಿನ ಆರೋಗ್ಯದ ಮೇಲೆ ನಿಗಾ ವಹಿಸಲು ಸೂಚಿಸಲಾಗಿದ್ದು, ಮಕ್ಕಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ಹೊರತುಪಡಿಸಿ ಬೇರೆಯವರಿಗೆ ಶಾಲೆ ಆವರಣದೊಳಗೆ ಪ್ರವೇಶ ನೀಡದಂತೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.