ದೆಹಲಿ: ಅಕ್ರಮ ಡಿನೋಟಿಫಿಕೇಷನ್ ಆರೋಪದಡಿಯಲ್ಲಿ ತನಿಖೆ ಎದುರಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಬೆಂಗಳೂರಿನ ಬೆಳ್ಳಂದೂರು ಬಳಿಯ ಭೂಮಿ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ಸಿಜೆಐ ಪೀಠ ತಡೆಯಾಜ್ಞೆ ನೀಡಿದೆ.
ಈ ಹಿಂದೆ ಇದೇ ಪ್ರಕರಣದ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಪ್ರಕರಣ ರದ್ದುಪಡಿಸಲು ನಿರಾಕರಿಸಿತ್ತು. ಆದರೆ ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಬಿಎಸ್ವೈ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. 10 ವರ್ಷಗಳ ಹಿಂದಿನ ಪ್ರಕರಣದಲ್ಲಿ ಸಿಎಂ ಯಡಿಯೂರಪ್ಪರಿಗೆ ನಿಟ್ಟುಸಿರು ಬಿಡುವಂತಹ ಆದೇಶವನ್ನು ಸರ್ವೋಚ್ಛ ನ್ಯಾಯಾಲಯ ನೀಡಿದೆ.
ಏನಿದು ಪ್ರಕರಣ?: ಬೆಂಗಳೂರು ಉತ್ತರ ಜಾಲ ಹೋಬಳಿಯ ಹೂವಿನಾಯಕಹಳ್ಳಿಯಲ್ಲಿ ಕೆಐಎಡಿಬಿ ಸುಮಾರು 20 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯನಾಯ್ಡು ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು. 2012ರಲ್ಲಿ ಸಲ್ಲಿಸಿದ್ದ ದೋಷಾರೋಪ ಪಟ್ಟಿ ಅನುಸಾರ ಕ್ರಮ ಜರುಗಿಸಲು ಲೋಕಾಯುಕ್ತ ವಿಶೇಷ ಕೋರ್ಟ್ಗೆ ಹೈಕೋರ್ಟ್ ಸೂಚನೆ ನೀಡಿತ್ತು.