ಅಹಮದಾಬಾದ್: ಸೂರ್ಯಕುಮಾರ್ ಯಾದವ್ ಸ್ಫೋಟಕ ಬ್ಯಾಟಿಂಗ್ ಹಾಗೂ ಶಾರ್ದೂಲ್ ಠಾಕೂರ್ ಅದ್ಭುತ ಬೌಲಿಂಗ್ ಪ್ರದರ್ಶನದಿಂದ ಇಂಗ್ಲೆಂಡ್ ವಿರುದ್ಧ ಭಾರತವು ೮ ರನ್ಗಳಿಂದ ರೋಚಕ ಗೆಲುವು ಸಾಧಿಸಿದೆ.
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುರುವಾರ ನಡೆದ ಇಂಗ್ಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ ಗೆಲ್ಲುವ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ 2-2ರ ಸಮಬಲ ಸಾಧಿಸಿದೆ.
ಟಾಸ್ ಸೋತು ಬ್ಯಾಟಿಂಗ್ಗೆ ಇಳಿದ ಭಾರತವು ರೋಹಿತ್ ಶರ್ಮಾ 12 ರನ್, ಕೆಎಲ್ ರಾಹುಲ್ 14 ರನ್, ಸೂರ್ಯಕುಮಾರ್ ಯಾದವ್ 57 ರನ್, ರಿಷಭ್ ಪಂತ್ 30 ರನ್, ಶ್ರೇಯಸ್ ಐಯ್ಯರ್ 37 ರನ್, ಹಾರ್ದಿಕ್ ಪಾಂಡ್ಯ 11 ರನ್, ಶಾರ್ದೂಲ್ ಠಾಕೂರ್ 10 ರನ್ ಸಹಾಯದಿಂದ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿತ್ತು. ಇಂಗ್ಲೆಂಡ್ ಪರ ಜೋಫ್ರಾ ಆರ್ಚರ್ 4 ವಿಕೆಟ್ ಕಿತ್ತು ಮಿಂಚಿದರೆ, ಆದಿಲ್ ರಶೀದ್, ಮಾರ್ಕ್ವುಡ್, ಬೆನ್ ಸ್ಟೋಕ್ಸ್, ಸ್ಯಾಮ್ ಕರನ್ ತಲಾ ಒಂದು ವಿಕೆಟ್ ಪಡೆದರು.
ಗುರಿ ಬೆನ್ನಟ್ಟಿದ ಇಂಗ್ಲೆಂಡ್, ಜೇಸನ್ ರಾಯ್ 40 ರನ್, ಬೆನ್ ಸ್ಟೋಕ್ಸ್ 46 ರನ್ ಸಹಾಯದಿಂದ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 177 ರನ್ ಬಾರಿಸಲು ಶಕ್ತವಾಯಿತು. ಭಾರತದ ಪರ ಯುವ ಬೌಲರ್ ಶಾರ್ದೂಲ್ ಠಾಕೂರ್ 3 ವಿಕೆಟ್ ಕಿತ್ತರೆ, ಹಾರ್ದಿಕ್ ಪಾಂಡ್ಯ ಹಾಗೂ ರಾಹುಲ್ ಚಾಹರ್ ತಲಾ 2 ವಿಕೆಟ್, ಭುವನೇಶ್ವರ್ ಕುಮಾರ್ ಒಂದು ವಿಕೆಟ್ ಪಡೆದು ತಂಡದ ಗೆಲುವಿಗೆ ಆಸರೆಯಾದರು.