ಸಾರ್ವಜನಿಕವಾಗಿ ದರ್ಪ ಜೆ.ಎಂ.ಎಫ್.ಸಿ. ನ್ಯಾಯಾಧೀಶೆ ಗಾಯತ್ರಿ ಅವರ ವರ್ಗಾವಣೆ.!
ಬೆಂಗಳೂರು: ಬೈಕ್ ಸವಾರನೊಬ್ಬ ತನ್ನ ಕಾರನ್ನು ಓವರ್‌ಟೇಕ್ ಮಾಡಿದನೆಂಬ ಕ್ಷುಲ್ಲಕ ಕಾರಣಕ್ಕೆ ಸಾರ್ವಜನಿಕವಾಗಿ ದರ್ಪ ತೋರಿ, ಹೈಕೋರ್ಟ್‌ನಿಂದ ತೀವ್ರ ತರಾಟೆಗೆ ಒಳಗಾಗಿದ್ದ ಕೋಲಾರ ಜಿಲ್ಲೆಯ ಮಾಲೂರು ಜೆ.ಎಂ.ಎಫ್.ಸಿ. ನ್ಯಾಯಾಧೀಶೆ ಗಾಯತ್ರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಚಂದ್ರಶೇಖರ ರೆಡ್ಡಿ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಕೆಲ ದಿನಗಳ ಹಿಂದೆ ನ್ಯಾಯಾಧೀಶೆ ಗಾಯತ್ರಿ ಅವರು ಪ್ರಯಾಣಿಸುತ್ತಿದ್ದ ಇನೋವಾ ಕಾರನ್ನು ಬೈಕ್ ಸವಾರ ವಿನಯ್ ಎಂಬುವವರು ಓವರ್‌ಟೇಕ್ ಮಾಡಿದ್ದರು. ಇದರಿಂದ ಕೆರಳಿದ ನ್ಯಾಯಾಧೀಶರು, ಬೈಕ್ ಸವಾರನನ್ನು ಬೆನ್ನಟ್ಟಿ ಹೋಗಿ ಸಾರ್ವಜನಿಕವಾಗಿ ರಂಪಾಟ ನಡೆಸಿದ್ದರು. ಅಲ್ಲದೆ, ಸ್ಥಳಕ್ಕೆ ಪೊಲೀಸರನ್ನು ಕರೆಸಿ ಗಲಾಟೆ ಮಾಡಿದ್ದರು. ಈ ಸಂಪೂರ್ಣ ಘಟನೆಯ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಯ ನಂತರ, ಬೈಕ್ ಸವಾರ ವಿನಯ್ ವಿರುದ್ಧ ಮಾಲೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಕೂಡ ದಾಖಲಿಸಲಾಗಿತ್ತು.
ತಮ್ಮ ವಿರುದ್ಧ ದಾಖಲಾಗಿದ್ದ ಈ ಸುಳ್ಳು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೈಕ್ ಸವಾರ ವಿನಯ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು, ಅಧಿಕಾರ ದುರ್ಬಳಕೆ ಮಾಡಿಕೊಂಡು ಎಫ್‌ಐಆರ್ ದಾಖಲಿಸಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡಿತ್ತು. ಜೊತೆಗೆ, ಸಾರ್ವಜನಿಕವಾಗಿ ಇಂತಹ ನಡವಳಿಕೆ ತೋರಿದ ನ್ಯಾಯಾಧೀಶೆಯ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಿಜಿಸ್ಟ್ರಾರ್‌ಗೆ ಪೀಠವು ಸೂಚನೆ ನೀಡಿತ್ತು.