ದಾವಣಗೆರೆ: ಗ್ಯಾರಂಟಿ ಯೋಜನೆಗಳ ಜೊತೆಗೆ ಕ್ಷೇತ್ರಗಳ ಅಭಿವೃದ್ಧಿಗೂ ಆದ್ಯತೆ ನೀಡಲಾಗುವುದು ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಟಿ.ರಘುಮೂರ್ತಿ ಅವರು ಹೇಳಿದರು.
ಸೋಮವಾರ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಒಟ್ಟು ರೂ.31.82 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ, ಕೆಲವು ಕಾಮಗಾರಿಗಳನ್ನು ಉದ್ಘಾಟಿಸಿದ ಬಳಿಕ ಆಯೋಜಿಸಿದ್ದ ಸಾರ್ವಜನಿಕ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ನಂತರ ತಮ್ಮದೇ ಆದ ಆಡಳಿತದ ಇತಿಹಾಸ ನಿರ್ಮಿಸಿದ್ದಾರೆ. ಪ್ರಸ್ತುತ ಸರ್ಕಾರ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ ಪರಿಹರಿಸುವ ಉದ್ದೇಶದಿಂದ ಜನಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಭಾರತ್ ಜೋಡೋ ಯಾತ್ರೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ರಾಜ್ಯದ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೂ ಸರ್ಕಾರ ಆದ್ಯತೆ ನೀಡಿದೆ ಎಂದು ತಿಳಿಸಿದರು.
ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಮಾರು ರೂ.16 ಸಾವಿರ ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.
ರಾಜ್ಯದಲ್ಲಿ ಪರಿಶಿಷ್ಟ ವರ್ಗಗಳ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸುಮಾರು ರೂ.10 ಸಾವಿರ ಕೋಟಿ ಅನುದಾನ ಬಿಡುಗಡೆಯಾಗಿದ್ದರೂ ಅದು ಅರ್ಹ ಸಮುದಾಯಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ವಿಚಾರ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಪರಿಷತ್ತಿನ ಸಭೆ ಕರೆದು ಅನುದಾನದ ಸದ್ಬಳಕೆ ಹಾಗೂ ಸಮುದಾಯಗಳಿಗೆ ಸೌಲಭ್ಯ ತಲುಪಿಸುವ ಕುರಿತು ಚರ್ಚಿಸಲಾಗುವುದು ಎಂದರು.